‘ಕಾಲೆ ಕನೂನ್ ಕೊ ವಾಪಸ್ ಲೋ, ವಾಪಸ್ ಲೋ, ವಾಪಸ್ ಲೋ’ [‘ಕರಾಳ ಕಾನೂನುಗಳನ್ನು ಹಿಂತೆಗೆದುಕೊಳ್ಳಿ, ಹಿಂದಕ್ಕೆ ತೆಗೆದುಕೊಳ್ಳಿ, ಹಿಂದಕ್ಕೆ ತೆಗೆದುಕೊಳ್ಳಿ!’]. ಗಣರಾಜ್ಯೋತ್ಸವದ ಹಿಂದಿನ ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಈ ಘೋಷಣೆಗಳು ಮೊಳಗುತ್ತಿದ್ದವು.
ಮೈದಾನದಲ್ಲಿ ಸಂಯುಕ್ತಾ ಶೆಟ್ಕರಿ ಕಾಮಗಾರ್ ಮೋರ್ಚಾ ಆಯೋಜಿಸಿದ್ದ ಧರಣಿಯಲ್ಲಿ ಹತ್ತಾರು ಸಾವಿರ ಪ್ರತಿಭಟನಾಕಾರರಿದ್ದರು. ಅವರು ಮಹಾರಾಷ್ಟ್ರದ 21 ಜಿಲ್ಲೆಗಳಿಂದ ದೆಹಲಿಯ ಗಡಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ನಾಸಿಕ್‌ನಿಂದ ಎರಡು ದಿನಗಳ ಕಾಲ ಸುಮಾರು 180 ಕಿಲೋಮೀಟರ್ ಮೆರವಣಿಗೆ ನಡೆಸಿದ ನಂತರ ಇಲ್ಲಿ ಸೇರಿದ್ದಾರೆ.
ಸಿಂಘು ಮತ್ತು ದೆಹಲಿಯ ಸುತ್ತಮುತ್ತಲಿನ ಇತರ ಪ್ರತಿಭಟನಾ ಸ್ಥಳಗಳಲ್ಲಿ ಕಳೆದೆರಡು ತಿಂಗಳುಗಳಿಂದ ಲಕ್ಷಾಂತರ ಕೃಷಿಕರು ವಿರೋಧ ವ್ಯಕ್ತಪಡಿಸುತ್ತಿರುವ ಈ ಕಾನೂನುಗಳನ್ನು ಕೇಂದ್ರ ಸರ್ಕಾರವು ಮೊದಲು ಜೂನ್ 5, 2020ರಂದು ಸುಗ್ರೀವಾಜ್ಞೆಗಳಾಗಿ ಹೊರಡಿಸಿ, ನಂತರ ಸೆಪ್ಟೆಂಬರ್ 14ರಂದು ಸಂಸತ್ತಿನಲ್ಲಿ ಕೃಷಿ ಮಸೂದೆಗಳಾಗಿ ಪರಿಚಯಿಸಿ ಅದೇ ತಿಂಗಳ 20ರೊಳಗೆ ಕಾಯಿದೆಗಳನ್ನಾಗಿ ಆತುರದಿಂದ ಜಾರಿಗೆ ತಂದಿದೆ.
ರೈತರು ವಿರೋಧಿಸುತ್ತಿರುವ ಆ ಕಾನೂನುಗಳೆಂದರೆ: ರೈತ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ, 2020 ; ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ 2020ರ ಒಪ್ಪಂದ ಮಸೂದೆ ; ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ, 2020. ಈ ಕಾನೂನುಗಳು ಪ್ರತಿ ಭಾರತೀಯರ ಮೇಲೆ ಪರಿಣಾಮ ಬೀರಲಿರುವುದರಿಂದಲೂ ಅವುಗಳನ್ನು ಟೀಕಿಸಲಾಗುತ್ತಿದೆ. ದೇಶದ ಎಲ್ಲಾ ನಾಗರಿಕರ ಕಾನೂನು ನೆರವು ಪಡೆಯುವ ಹಕ್ಕನ್ನು ಈ ಕಾನೂನುಗಳು ಕಸಿದುಕೊಳ್ಳುತ್ತವೆ, ಇದು ಭಾರತದ ಸಂವಿಧಾನದ 32ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ.
ಜನವರಿ 24 ಮತ್ತು 25 ರಂದು ಆಜಾದ್ ಮೈದಾನದಲ್ಲಿ ನಡೆದ ಎರಡು ದಿನಗಳ ಪ್ರತಿಭಟನಾ ಸಭೆಯ ಚಿತ್ರಗಳು ಇವು:
ಅನುವಾದ - ಶಂಕರ ಎನ್. ಕೆಂಚನೂರು